ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ : ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ ಜೋರಾಗಿದೆ. ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ವರುಣಾಬ್ಬರ ಜೋರಾಗಿದ್ದು, ಈ ನಡುವೆ ಮುಂದಿನ ನಾಲ್ಕೈದು ದಿನ ಮಳೆ ಅಬ್ಬರಿಸೋ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೂರ್ವ ಮುಂಗಾರಿನ ಅಬ್ಬರ ಜೋರಾಗಿದೆ. ಕಳೆದ ಎಂಟತ್ತು ದಿನಗಳಿಂದ ಅಬ್ಬರಿಸುತ್ತಿರೋ ಮಳೆರಾಯ, ರಾಜ್ಯದಾದ್ಯಂತ ಮುಂದಿನ ನಾಲ್ಕೈದು ದಿನ ಮತ್ತಷ್ಟು ಅಬ್ಬರಿಸುವ ಸಾಧ್ಯತೆಯಿದೆ. ರಾಜ್ಯದ ಅನೇಕ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ಕೂಡ ಇದ್ದು, ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.

ಮೇಲ್ಮೈ ಸುಳಿಗಾಳಿ, ಟ್ರಫ್ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಇಂದಿನಿಂದ ಐದು ದಿನ ರಾಜ್ಯದ 17 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ. ಇದರೊಂದಿಗೆ ಮುಂಗಾರು ಆರಂಭಕ್ಕೂ ಮುನ್ನವೇ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸ ಮನೆ ಮಾಡಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ. ಜೊತೆಗೆ ಉತ್ತರ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

You cannot copy content from Baravanige News

Scroll to Top