ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣನ ಆರ್ಭಟದ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆಗಳನ್ನು ಘೋಷಣೆ ಮಾಡಿದೆ.
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 16 ರಿಂದ ಮೇ 19 ರವರೆಗೆ ಹವಾಮಾನದಲ್ಲಿ ಭಾರಿ ಏರುಪೇರಾಗಲಿದೆ. ಈ ಅವಧಿಯಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ 64.5mm ನಿಂದ 115.5mm ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಗುಡುಗು, ಮಿಂಚು ಮಾತ್ರವಲ್ಲದೆ ಗಂಟೆಗೆ 40-50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆ ಸಂಭವಿಸುವ ಸಾಧ್ಯತೆಯಿದೆ. ಹೀಗಾಗಿ ಉತ್ತರ ಒಳನಾಡಿನ ಭಾಗಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಬಿರುಗಾಳಿ ಮತ್ತು ಸಿಡಿಲಿನ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಕೋರಲಾಗಿದೆ. ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಹಾಗೂ ಆಲಿಕಲ್ಲು ಮಳೆಯಿಂದ ಬೆಳೆಗಳನ್ನು ರಕ್ಷಿಸಿಕೊಳ್ಳಲು ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ

