5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದು; ಹೈಕೋರ್ಟ್ ತೀರ್ಪು

ಬೆಂಗಳೂರು: 5 ಮತ್ತು 8ನೇ ತರಗತಿಗೆ ಇದೇ ವರ್ಷದಿಂದ ನಡೆಸಲು ಉದ್ದೇಶಿಸಿದ್ದ ಪಬ್ಲಿಕ್ ಪರೀಕ್ಷೆಯನ್ನು ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿತ್ತು. ಆದರೆ ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಮುಂದಿನ ವರ್ಷದಿಂದ ಪರೀಕ್ಷೆ ನಡೆಸಬಹುದು ಅಥವಾ ಬಿಡಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

2022-23ನೇ ಸಾಲಿನಿಂದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು. ರಾಜ್ಯ ಪಠ್ಯಕ್ರಮವನ್ನು ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿತ್ತು, ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಪೋಷಕರು ಹಾಗೂ ವಿದ್ಯಾರ್ಥಿಗಳು ಅಸಮಾಧಾನ ಹೊರಹಾಕಿದ್ದರು. ಇದರ ಬೆನ್ನಲ್ಲೇ 5 ಮತ್ತು 8 ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದುಗೊಳಿಸಬೇಕೆಂದು ಕೆಲವು ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು.

ರಾಜ್ಯದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿತ್ತು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿತ್ತು. ರಾಜ್ಯದಲ್ಲಿ ಈವರೆಗೆ 1ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ನೇರವಾಗಿ ಪಾಸ್ ಮಾಡುವ ಕ್ರಮ ಅನುಸರಿಸಲಾಗುತ್ತಿತ್ತು. ಹೀಗಾಗಿ ಮಕ್ಕಳ ಕಲಿಕೆಯ ಆಸಕ್ತಿ ಕಡಿಮೆಯಾಗಿದೆ. ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎನ್ನುವ ಅಭಿಪ್ರಾಯಗಳಿದ್ದವು.

ಇದೇ ಪರಿಸ್ಥಿತಿ ಮುಂದುವರಿದರೆ ಎಸ್.ಎಸ್.ಎಲ್. ಸಿ , ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗಬಹುದು ಎಂದು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿತ್ತು, ಆದರೆ ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆಯನ್ಜು ರದ್ದುಗೊಳಿಸಿ ಆದೇಶ ಹೊರಡಿಸಿದೆ.

You cannot copy content from Baravanige News

Scroll to Top