Saturday, July 27, 2024
Homeಸುದ್ದಿರಾಜ್ಯ'ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ವಇಚ್ಛೆಯಿಂದ ಸ್ಪರ್ಧಿಸದಿರಲು ನಿಶ್ಚಯಿಸಿದ್ದೇನೆ' : ಹಾಲಾಡಿ ಶ್ರೀನಿವಾಸ್ ಶೆಟ್ಟಿ

‘ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ವಇಚ್ಛೆಯಿಂದ ಸ್ಪರ್ಧಿಸದಿರಲು ನಿಶ್ಚಯಿಸಿದ್ದೇನೆ’ : ಹಾಲಾಡಿ ಶ್ರೀನಿವಾಸ್ ಶೆಟ್ಟಿ

ಕುಂದಾಪುರ (ಉಡುಪಿ ಜಿಲ್ಲೆ): ಐದು ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾರೆ.

ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಹಾಲಾಡಿ ‘ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಸತತ 5 ಅವಧಿಗೆ ಬಹು ನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ಕ್ಷೇತ್ರದ ಎಲ್ಲ ಜಾತಿ, ಧರ್ಮದ ಮತದಾರ ಬಾಂಧವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ವಇಚ್ಛೆಯಿಂದ ಸ್ಪರ್ಧಿಸದಿರಲು ನಿಶ್ಚಯಿಸಿದ್ದೇನೆ’ ಎಂದು ತಿಳಿಸಿದ್ದಾರೆ.

ಪತ್ರದಲ್ಲಿ ಏನಿದೆ: ವಿಧಾನಸಭಾ ಸದಸ್ಯನಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿ ನಿಷ್ಠೆಯಿಂದ ಜವಾಬ್ದಾರಿ ನಿಭಾಯಿಸಿದ್ದೇನೆ. ಕುಂದಾಪುರ ಬಹಳಷ್ಟು ಗ್ರಾಮೀಣ ಭಾಗಗಳನ್ನು ಹೊಂದಿರುವ ಕ್ಷೇತ್ರವಾಗಿದ್ದು, ಎಲ್ಲ ವರ್ಗದ ಮತದಾರರಿಗೂ ಬೇಡಿಕೆಗಳನ್ನು ಹೇಳಿಕೊಳ್ಳಲು ಅವಕಾಶ ಮಾಡಿಕೊಟ್ಟ, ನೋವು ಸಂಕಷ್ಟಗಳಿಗೆ ಸ್ಪಂದಿಸಿದ ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಿದ ಸಂತೃಪ್ತಿ ಇದೆ.

ಐದೂ ಚುನಾವಣೆಗಳಲ್ಲಿ ದಾಖಲೆ ಮತಗಳ ಅಂತರದಿಂದ ಚುನಾಯಿಸಿದ ಕ್ಷೇತ್ರದ ಮತದಾರರನ್ನು ವಿಶ್ವಾಸಕ್ಕೆ ಪಡೆದು, ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿ ಪ್ರೀತಿ ವಿಶ್ವಾಸ ಗಳಿಸಿದ ಹೆಮ್ಮೆ ಇದೆ. ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್‌, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿಗೆ ದುಡಿದಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ, ಪ್ರಮುಖರಿಗೆ ಹಾಗೂ ಅಭಿಮಾನಿಗಳಿಗೆ ಚಿರ ಋಣಿಯಾಗಿರುತ್ತೇನೆ.

ಕ್ಷೇತ್ರದ ಅಭಿವೃದ್ಧಿಯ ವಿಚಾರದಲ್ಲಿ ಮಾರ್ಗದರ್ಶನ ನೀಡಿದ ಹಾಗೂ ಸಹಕಾರ ನೀಡಿದ ಪಕ್ಷದ ಪ್ರಮುಖರಿಗೆ, ಹಿರಿಯ ಕಿರಿಯ ಸ್ನೇಹಿತರಿಗೆ, ಅಧಿಕಾರಿಗಳಿಗೆ, ಮಾಧ್ಯಮದವರಿಗೆ ಹಾಗೂ ಕ್ಷೇತ್ರದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.

ಮತದಾರರು ನನ್ನ ಮೇಲಿಟ್ಟ ಪ್ರೀತಿ ಮತ್ತು ನಂಬಿಕೆಯೇ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಕರ್ತವ್ಯ ನಿರ್ವಹಿಸಲು ಪ್ರೇರಣೆಯಾಗಿದೆ. ಸಮಸ್ತ ಮತ ಬಾಂಧವರಿಗೂ ಕೃತಜ್ಞತೆ ಸಲ್ಲಿಸುತ್ತ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಬಿಜೆಪಿಯಿಂದ ಆಯ್ಕೆಯಾಗಲು ಅವಕಾಶ ಕೊಟ್ಟ ಪಕ್ಷಕ್ಕೂ ಹಾಗೂ ಪಕ್ಷೇತರನಾಗಿ ನಿಂತು ಗೆಲ್ಲಲು ಸಹಕರಿಸಿದವರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ. ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗೆ ಮತದಾರರು ಸಹಕಾರ ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರಣ ಅಸ್ಪಷ್ಟ: ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅಜಾತಶತ್ರುವಿನಂತೆ ಗುರುತಿಸಿಕೊಂಡಿದ್ದ ಹಾಗೂ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿರುವುದಕ್ಕೆ ಸ್ಪಷ್ಟ ಕಾರಣಗಳು ಸಿಕ್ಕಿಲ್ಲ. ಹಾಲಾಡಿ ಅವರ ನಿರ್ಧಾರ ಸಾಮಾಜಿಕ ಜಾಲ ತಾಣಗಳಲ್ಲಿ ಬಹಳಷ್ಟು ಚರ್ಚೆಯಾಗುತ್ತಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News