Saturday, April 20, 2024
Homeಸುದ್ದಿಕರಾವಳಿಮಳೆಗಾಲ ಎದುರಿಸಲು ಎಲ್ಲ ರೀತಿಯಲ್ಲೂ ಸಜ್ಜಾಗಿ: ವಿವಿಧ ಅಧಿಕಾರಿಗಳಿಗೆ ಡಿಸಿ ಸೂಚನೆ

ಮಳೆಗಾಲ ಎದುರಿಸಲು ಎಲ್ಲ ರೀತಿಯಲ್ಲೂ ಸಜ್ಜಾಗಿ: ವಿವಿಧ ಅಧಿಕಾರಿಗಳಿಗೆ ಡಿಸಿ ಸೂಚನೆ

ಮಣಿಪಾಲ: ಮಳೆಗಾಲದಲ್ಲಿ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಜೀವ ಹಾನಿ, ಆಸ್ತಿ ಹಾನಿ ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿಂದೆ ಬಾಧಿಸಿದ್ದ ಪ್ರದೇಶಗಳಲ್ಲಿ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು ಎಂದರು.

ಎಚ್ಚರಿಕೆ ಫ‌ಲಕ ಅಳವಡಿಸಿ
ನಗರ ಹಾಗೂ ಗ್ರಾ.ಪಂ. ವ್ಯಾಪ್ತಿಯಲ್ಲಿ ಚರಂಡಿ, ತೋಡುಗಳನ್ನು ಸ್ವತ್ಛಗೊಳಿಸ ಬೇಕು. ಗ್ರಾಮಗಳಲ್ಲಿರುವ ತೆರೆದ ಬಾವಿ/ಕೆರೆ ಗಳು ಹಾಗೂ ನೀರಿನ ಗುಂಡಿಗಳ ಸುತ್ತ ತಡೆಬೇಲಿ ಹಾಕಿಸಿ, ಎಚ್ಚರಿಕೆ ಫ‌ಲಕ ಅಳವಡಿಸಬೇಕು. ರಾ.ಹೆ.ಯಲ್ಲಿ ಮಳೆ ನೀರಿನಿಂದ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು. ಶಾಲೆ, ಅಂಗನವಾಡಿ ಕಟ್ಟಡಗಳ ಪರಿಸ್ಥಿತಿ ಪರಿಶೀಲಿಸಬೇಕು. ಈಗಾಗಲೇ ಕೈಗೊಂಡಿರುವ ದುರಸ್ತಿ ಕಾರ್ಯಗಳನ್ನು ವಾರದ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಪ್ರವಾಸಿ ತಾಣಗಳಲ್ಲಿ ಸುರಕ್ಷೆಗೆ ಆದ್ಯತೆ ನೀಡಬೇಕು. ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ಶೀಘ್ರದಲ್ಲಿಯೇ ತೆರವುಗೊಳಿಸಬೇಕು. ಬೀದಿ ದೀಪಗಳನ್ನು ಅಳವಡಿಸಬೇಕು.
ಸಾರ್ವಜನಿಕರಿಂದ ದೂರು ಬಂದಲ್ಲಿ ತತ್‌ಕ್ಷಣ ಸ್ಪಂದಿಸಬೇಕು ಎಂದು ತಿಳಿಸಿದರು.

ಆರೋಗ್ಯ ಇಲಾಖೆಗೆ ಸೂಚನೆ
ಜಿಲ್ಲೆಯ ನಗರ ವ್ಯಾಪ್ತಿಯಲ್ಲಿ 14, ಗ್ರಾಮೀಣ ವ್ಯಾಪ್ತಿಯಲ್ಲಿ 32 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರಿನ ಸರಬರಾಜು ಮಾಡಲಾಗುತ್ತಿದೆ. ಮಳೆಗಾಲದಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಸಾಂಕಾಮಿಕ ರೋಗಗಳು ಹರಡುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಅರಿವು ಮೂಡಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿ.ಪಂ. ಸಿಇಒ ಪ್ರಸನ್ನ ಎಚ್‌., ಎಸ್ಪಿ ಹಾಕೇ ಅಕ್ಷಯ್‌ ಮಚ್ಚೀಂದ್ರ, ತರಬೇತಿ ನಿರತ ಐಎಎಸ್‌ ಅಧಿಕಾರಿ ಯತೀಶ್‌ ಸಹಿತ ಅಧಿಕಾರಿಗಳು ಉಪಸ್ಥಿತರಿದ್ದರು.

ಬಿತ್ತನೆ ಬೀಜ ದಾಸ್ತಾನು
ಈ ಬಾರಿ 38 ಸಾವಿರ ಹೆ. ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜದ ದಾಸ್ತಾನು ಇಟ್ಟುಕೊಳ್ಳಬೇಕು. ರಸಗೊಬ್ಬರ ದಾಸ್ತಾನು ಇರುವಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಸಹಾಯವಾಣಿ
ಪ್ರಕೃತಿ ವಿಕೋಪದ ಹಾನಿಗೆ 48 ಗಂಟೆಯೊಳಗೆ ಪರಿಹಾರ ಒದಗಿಸಬೇಕು. ತೊಂದರೆಗೊಳಗಾದವರು ತತ್‌ಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಸಾರ್ವಜನಿಕರು ಉಚಿತ ಸಹಾಯವಾಣಿ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಹಾಯವಾಣಿ 1077/
0820  2574802
ಮೆಸ್ಕಾಂ – 1912
ರಕ್ಷಣೆ – 112

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News