ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ; ಸುಳಿವು ನೀಡಿದ ಕೆಎಂಎಫ್‌ ನೂತನ ಅಧ್ಯಕ್ಷ

ಬೆಂಗಳೂರು, ಜೂ 21: ಕರ್ನಾಟಕ ಹಾಲು ಮಾರಾಟ ಮಹಾಮಂಡಳ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಶಾಸಕ ಭೀಮಾ ನಾಯ್ಕ್ ಅವಿರೋಧ ಆಯ್ಕೆಯಾದ ಬೆನ್ನಲ್ಲೇ ನಂದಿನಿ ಹಾಲಿನ ದರ ಹೆಚ್ಚಳದ ಸುಳಿವು ನೀಡಿದ್ದಾರೆ.

ಹಾಲಿನ ದರ 5 ರೂ. ಏರಿಕೆಗೆ ಬೇಡಿಕೆ ಇಟ್ಟಿದ್ದೇವೆ. ದರ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಿದ ಬಳಿಕ ತೀರ್ಮಾನ ಕೈಗೊಳ್ಳುತ್ತೇವೆ.

ಎಲ್ಲಾ ಹಾಲು ಒಕ್ಕೂಟಗಳು 5 ರೂ. ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ. ದರ ಹೆಚ್ಚಿಸುವುದಲ್ಲದೆ, ಗುಣಮಟ್ಟದ ಹಾಲು, ಮೊಸರು, ತುಪ್ಪ ಗ್ರಾಹಕರಿಗೆ ಒದಗಿಸಲು ಆದ್ಯತೆ ನೀಡಲಿದ್ದೇವೆ ಎಂದು ಭೀಮಾ ನಾಯ್ಕ್ ಹೇಳಿದ್ದಾರೆ.

ಕೆಎಂಎಫ್‌ ಅಧ್ಯಕ್ಷರಾಗಿದ್ದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಧಿಕಾರಾವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿತ್ತು. ಈ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಅಧ್ಯಕ್ಷ ಸ್ಥಾನಕ್ಕಾಗಿ ಯಾರೂ ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Scroll to Top