Saturday, July 20, 2024
Homeಸುದ್ದಿಕರಾವಳಿಸಾರ್ವಜನಿಕರಿಗೆ ಪಾರದರ್ಶಕ ಮತ್ತು ತ್ವರಿತ ಸೇವೆ ನೀಡಿ : ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಕೆ

ಸಾರ್ವಜನಿಕರಿಗೆ ಪಾರದರ್ಶಕ ಮತ್ತು ತ್ವರಿತ ಸೇವೆ ನೀಡಿ : ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಕೆ

ಉಡುಪಿ : ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಅರ್ಜಿ ಸಲ್ಲಿಸಿದಾಗ ಅವುಗಳನ್ನು ನಿಯಮಾನುಸಾರವಾಗಿ, ಪಾರದರ್ಶಕವಾಗಿ, ತ್ವರಿತವಾಗಿ ವಿಲೇವಾರಿ ಮಾಡಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಅಧಿಕಾರಿಗಳು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ. ಸೂಚನೆ ನೀಡಿದರು. ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಕರ್ತವ್ಯದ ಅವಧಿಯಲ್ಲಿ ಕಚೇರಿಯಲ್ಲಿ ಉಪಸ್ಥಿತರಿದ್ದು, ಲಮಿತಿಯೊಳಗೆ ಕಡತಗಳ ವಿಲೇವಾರಿ ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಅವುಗಳ ಕುರಿತು ಅಗತ್ಯ ಕ್ರಮ ಕೈಗೊಳ್ಳುವ ಮೂಲಕ , ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದರು. ಈಗಾಗಲೇ ಡೀಮ್ಡ್ ಫಾರೆಸ್ಟ್ ನಿಂದ ವಿನಾಯಿತಿಗೊಂಡ ಜಮೀನುಗಳನ್ನು ಕಂದಾಯ ಹಾಗೂ ಅರಣ್ಯ ಇಲಾಖೆ ವತಿಯಿಂದ ಜಂಟಿ ಸರ್ವೇಯನ್ನು ಮಾಡುವುದರೊಂದಿಗೆ ಅರಣ್ಯದಿಂದ ಬೇರ್ಪಡಿಸಿ, ಸಾರ್ವಜನಿಕ ಉಪಯೋಗಿ ಸರಕಾರಿ ಕಟ್ಟಡಗಳ ನಿರ್ಮಾಣ ಸೇರಿದಂತೆ ಮತ್ತಿತರ ಜನೋಪಯೋಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಡೀಮ್ಡ್ ಪಾರೆಸ್ಟ್ನಿಂದ ವಿನಾಯಿತಿ ಹೊಂದಿದ ಜಾಗಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಬಾರಿಯ ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿತ್ತು. ಉತ್ತಮ ಮಳೆಯಿಂದಾಗಿ ಸದ್ಯ ಸಮಸ್ಯೆ ನಿವಾರಣೆಯಾಗಿದೆ. ಮುಂಬರುವ ದಿನಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಲು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ಮಳೆ ನೀರನ್ನು ಇಂಗಿಸುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕೆಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಭರದಿಂದ ಸಾಗಿದ್ದು, ರೈತರಿಗೆ ಸ್ಥಳೀಯವಾಗಿ ಅಗತ್ಯವಿರುವ ಭಿತ್ತನೆ ಬೀಜ ಲಭ್ಯವಿರುವಂತೆ ನೋಡಿಕೊಳ್ಳಬೇಕು. ರಸಗೊಬ್ಬರದ ದಾಸ್ತಾನು ಸಾಕಷ್ಟು ಇಟ್ಟುಕೊಳ್ಳುವುದರೊಂದಿಗೆ ಯಾವುದೇ ಗೊಂದಲಗಳು ಉಂಟಾಗದಂತೆ ವಿತರಣೆ ಕೈಗೊಳ್ಳಬೇಕು. ಪರಿಸರದಲ್ಲಿನ ಹೆಚ್ಚಿನ ತೇವಾಂಶದಿAದ ಅಡಿಕೆ ಬೆಳೆಯಲ್ಲಿ ಕಂಡುಬರುವ ಕೊಳೆರೋಗ ಹಾಗೂ ಹಳದಿ ಎಲೆ ಚುಕ್ಕಿ ರೋಗಗಳಿಗೆ ಅಗತ್ಯ ಔಷದೋಪಚಾರಗಳನ್ನು ವಿತರಿಸಬೇಕು ಎಂದರು .


ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನವು ಹಿಂದಿರುಗಿ ಹೋಗದಂತೆ ಎಚ್ಚರವಹಿಸಿ, ಪ್ರತಿಶತ 100 ರಷ್ಟು ಅನುಷ್ಠಾನಗೊಳಿಸುವ ಕಾರ್ಯವನ್ನು ಅನುಷ್ಠಾನಾಧಿಕಾರಿಗಳು ಮಾಡಬೇಕು ಎಂದರು. ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಿ.ಆರ್.ಝಡ್ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳುವವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಿ ಎಂದರು.

ಅರಣ್ಯ ಇಲಾಖೆ ವತಿಯಿಂದ ರಸ್ತೆ ಬದಿ ಸೇರಿದಂತೆ ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿನ ಅಪಾಯಕಾರಿ ಮರಗಳನ್ನು ಗುರುತಿಸಿ, ಅವುಗಳನ್ನು ತೆರವುಗೊಳಿಸಲು ಮುಂದಾಗಬೇಕು. ಪ್ರಸ್ತುತ ಸಾಲಿನಲ್ಲಿ ಗಿಡಮರಗಳನ್ನು ಬೆಳಸಲು ನಿಗಧಿಪಡಿಸಿರುವ ಗುರಿಯನ್ನು ಸಾಧಿಸಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಳೆ ಗಾಳಿಯಿಂದ ವಿದ್ಯುತ್ ಕಂಬಗಳು ಉರುಳಿ ವಿದ್ಯುತ್ ಸಂಪರ್ಕ ಕಡಿತಗೊಳಗಾದಲ್ಲಿ ಕೂಡಲೇ ಮರು ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದ ಅವರು, ವಿದ್ಯುತ್ ಮಾರ್ಗಗಳಿಗೆ ಅಡಚಣೆ ಉಂಟು ಮಾಡುವ ಮರದ ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯವನ್ನು ಕೈಗೊಳ್ಳಬೇಕೆಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ 27 ಕ್ಕೂ ಹೆಚ್ಚು ಅಂಗನವಾಡಿ ಕಟ್ಟಡಗಳಿಗೆ ಜಾಗದ ಕೊರತೆಯಿಂದ ಸ್ವಂತ ಕಟ್ಟಡ ನಿರ್ಮಾಣಕ್ಕೆ ಸಾಧ್ಯವಾಗಿರುವುದಿಲ್ಲ. ಸ್ಥಳೀಯವಾಗಿ ದಾನಿಗಳನ್ನು ಸಂಪರ್ಕಿಸಿ, ಅವರಿಂದ ಅಗತ್ಯ ಜಾಗವನ್ನು ಪಡೆದು ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು ಎಂದರು. ಚೆಕ್ ಡ್ಯಾಂ ಗಳ ನಿರ್ವಹಣೆ ಸೂಕ್ತ ರೀತಿಯಲ್ಲಿ ಆಗದ ಕಾರಣ ನೀರು ಸರಾಗವಾಗಿ ಹರಿದು ಹೋಗದೇ ತಗ್ಗು ಪ್ರದೇಶಗಳಿಗೆ ನುಗ್ಗಿ ಕೃತಕ ನೆರೆ ಉಂಟಾಗುತ್ತಿದೆ. ಈ ಬಗ್ಗೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳುವಂತೆ ಸೂಚಿಸಿದರು. ಗ್ರಾಮೀಣ ಭಾಗಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುವ ಬಗ್ಗೆ ಎಚ್ಚರವಹಿಸಿ ಅವುಗಳಿಗೆ ಕಡಿವಾಣ ಹಾಕಲು ಮುಂದಾಗಬೇಕು, ಗೋವಾದ ಮೂಲಕ ಜಿಲ್ಲೆಗೆ ಅಕ್ರಮ ಮದ್ಯ ಸರಬರಾಜು ಆಗದಂತೆ ನೋಡಿಕೊಂಡಾಗ ಮಾತ್ರ ಅಬಕಾರಿ ಆದಾಯವನ್ನು ಹೆಚ್ಚಿಸಲು ಸಾಧ್ಯ ಎಂದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News