‘ಹಿಜಾಬ್’ ಧರಿಸಿ ಪರೀಕ್ಷೆ ಬರೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ: ಹಿಂದೂಪರ ಸಂಘಟನೆಗಳ ಆಕ್ರೋಶ

ಬೆಂಗಳೂರು, ಅ.23: ರಾಜ್ಯದಲ್ಲಿ ಮತ್ತೆ ಹಿಜಾಬ್ ದಂಗಲ್ ಸದ್ದು ಮಾಡ್ತಿದೆ. ಕಳೆದ ವರ್ಷ ಹಿಜಾಬ್ ಧರಿಸಿ ಶಾಲಾ ಕಾಲೇಜುಗಳಿಗೆ ಹೋಗುವ ವಿಚಾರ ಕೋಮುಸಂಘರ್ಷಕ್ಕೆ ಕಾರಣವಾಗಿ ರಾಜ್ಯಾದ್ಯಂತ ಗಲಭೆಗೆ ಕಾರಣವಾಗಿತ್ತು. ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಸರ್ಕಾರ ಅನುಮತಿ ನೀಡಿರುವ ಹಿನ್ನೆಲೆ ಹಿಂದೂಪರ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ನಿಗಮ ಮಂಡಳಿಗಳ ಹುದ್ದೆಗಳ ಭರ್ತಿ ಪರೀಕ್ಷೆಗಳಿಗೆ ಹಿಜಾಬ್ ಧರಿಸಿ ಬರಬಹುದು ಎಂದಿದೆ. ಇದಕ್ಕೆ ಹಿಂದೂಪರ ಸಂಘಟನೆಗಳು ಆಕ್ರೋಶಗೊಂಡಿವೆ.

ಈ ಹಿಂದೆ ರಾಜ್ಯದಲ್ಲಿ ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ಹೋಗುವ ವಿಚಾರದಲ್ಲಿ ಸಾಕಷ್ಟು ಗಲಾಟೆಗಳು ನಡೆದಿದ್ದು, ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್ ನಲ್ಲಿ ಹಿಜಾಬ್ ಧರಿಸಿ ಪಿಯು ಪರೀಕ್ಷೆ ನಡೆಸಲು ಅವಕಾಶ ಇಲ್ಲ ಅಂತಾ ಕೂಡಾ ಹೇಳಿತ್ತು. ಆದರೆ ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆಇಎ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿಯನ್ನು ನೀಡಿದೆ. ಇದೇ ತಿಂಗಳು ಅಕ್ಟೋಬರ್ 28 ಮತ್ತು ಅಕ್ಟೋಬರ್ 29 ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಳಿಗೆ ಹಿಜಾಬ್ ಧರಿಸಿ ಅಭ್ಯರ್ಥಿಗಳು ಹಾಜರಾಗಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

ಹಿಜಾಬ್ ಧರಿಸಿ ಪರೀಕ್ಷೆಗೆ ಅವಕಾಶ ನೀಡಿರುವ ಕೆಇಎ ಕೆಲವು ಷರತ್ತು ಹಾಕಿದೆ. ಪರೀಕ್ಷೆಗೆ ಅಭ್ಯರ್ಥಿಗಳು ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಿರಬೇಕು. ಅವರನ್ನು ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಲಿದ್ದಾರೆ ಅಂತಾ ತಿಳಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಗಲಾಟೆ ತಪ್ಪಿಸಲು ಈ ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿಯಾದ ರಮ್ಯಾ ತಿಳಿಸಿದ್ದಾರೆ.

You cannot copy content from Baravanige News

Scroll to Top